Crime News: ಮಂಗಳೂರು : ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್.ಎಸ್.ಎಸ್. ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಹಾಸ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದ್ದಾರೆನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
ಡಾ.ಕಲ್ಲಡ್ಕ ಪ್ರಭಾಕರ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ಥ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರ ವಿರುದ್ಧ ಕಲಂ: 353(2) ಬಿಎನ್ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.