ಬೆಂಗಳೂರು : ರಾಜ್ಯದ ಕರಾವಳಿ, ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನ ಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಜುಲೈ 17ರ ವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಬಾರಿ ವಾಡಿಕೆಯಂತೆ ಮಳೆಯಾಗಿಲ್ಲ. ಆದ್ರೆ ಜುಲೈ ತಿಂಗಳಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಮಳೆ ಯ ಆರ್ಭಟ ಇನ್ನಷ್ಟು ದಿನಗಳ ವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ನಾಡದೋಣಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆಯನ್ನು ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಸಾರ್ವಜನಿಕ ಸೊತ್ತುಗಳಿಗೆ ಹಾನಿಯಾದ ಘಟನೆ ಸಂಭವಿಸಿದೆ.
ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಗುಡ್ಡ ಪ್ರದೇಶ ದಲ್ಲಿ ವಾಸಿಸುವವರಿಗೆ ಎಚ್ಚರಿಕೆಯನ್ನು ನೀಡಲಾಗಿದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತ ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕ್ರಮಕೈಗೊಂಡಿದೆ