ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರೋ ಭಾರೀ ವಾಯುಭಾರ ಕುಸಿತದ ಕಾರಣ, ಮತ್ತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ವಾಯುಭಾರ ಕುಸಿತದ ಕಾರಣ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಾ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಾರ್ಚ್ 7ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಂಭವ ಇದೆ.
ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಮಾರ್ಚ್ 9ರವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 8 ಮತ್ತು 9ರಂದು ರಾಜ್ಯ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.