ಕಾರವಾರ: ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಅತ್ಯಂತ ವ್ಯವಸ್ಥಿತ ಮತ್ತು ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಮತ್ತು ಪರೀಕ್ಷಾ ಮಾರ್ಗಸೂಚಿಗಳನ್ನು ಕಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ದತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ 20035 ವಿದ್ಯಾರ್ಥಿಗಳು ಹಾಜರಾಗುತ್ತಿದ್ದು, ಯಾವುದೇ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮೊದಲ ಪ್ರಯತ್ನದಲ್ಲಿಯೇ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ವಿದ್ಯಾರ್ಥಿಗಳನ್ನು ಸೂಕ್ತ ರೀತಿಯಲ್ಲಿ ಪ್ರೋತ್ಸಾಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 37 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು ಈ ಎಲ್ಲಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸುವ ಕಾರ್ಯವನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಸೂಚಿಸಿದ ಅವರು, ಎಲ್ಲಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಜಿಲ್ಲೆಯಲ್ಲಿ ಬಿಸಿಗಾಳಿಯ ವಾತಾವರಣ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ಸಿಬ್ಬಂದಿಯ ನಿಯೋಜನೆ ಮತ್ತು ಸಮರ್ಪಕ ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡಿದರು.
ಪರೀಕ್ಷಾ ದಿನದಂದು ಮತ್ತು ಪರೀಕ್ಷಾ ಹಿಂದಿನ ದಿನದಂದು ವಿದ್ಯಾರ್ಥಿಗಳ ಶೈಕ್ಷಣಿಕ ಅಭ್ಯಾಸಕ್ಕೆ ತೊಂದರೆಯಾಗದಂತೆ ವಿದ್ಯುತ್ ಕಡಿತಗೊಳಿಸದಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕೆ.ಎಸ್.ಆರ್.ಟಿ.ಸಿ. ವತಿಯಿಂದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಲು ಯಾವುದೇ ಅನಾನುಕೂಲವಾಗದಂತೆ ಸಂಚಾರದದಲ್ಲಿ ವ್ಯತ್ಯಯವಾಗದಂತೆ ಮುನ್ನೆಚರಿಕೆ ವಹಿಸುವಂತೆ ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಸಾಗಾಟ ವಾಹನಗಳಿಗೆ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವ ಬಗ್ಗೆ, 200 ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸುವ ಬಗ್ಗೆ ಆದೇಶ ನೀಡಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಕಾರವಾರ ಡಿಡಿಪಿಐ ಲತಾ ನಾಯಕ್, ಶಿರಸಿ ಡಿಡಿಪಿಐ ಬಸವರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಹಾಜರಿದ್ದರು.