ಕಾರವಾರ: ಮಾರ್ಚ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ವಿತರಿಸಲಾಗುವ ಪಡಿತರ ಅಕ್ಕಿಯ ದುರುಪಯೋಗವಾಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಡಿತರ ಚೀಟಿದಾರರಿಗೆ ವಿತರಿಸಿದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಅನಧಿಕೃತವಾಗಿ ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅಕ್ಕಿ ವಿತರಣೆ ಕುರಿತಂತೆ ಪಡಿತರ ಅಂಗಡಿಗಳಲ್ಲಿ ಪ್ರತಿದಿನದ ವಿತರಣೆಯ ವಿವರ ಮತ್ತು ದಾಸ್ತಾನು ವಿವರಗಳನ್ನು ಪರಿಶೀಲಿಸಬೇಕು, ಪಡಿತರ ವಿತರಣೆಯ ತಂತ್ರಾಂಶ ಕಾರ್ಯನಿರ್ವಹಣೆಗೆ ಇಂರ್ಟನೆಟ್ ಸಮಸ್ಯೆಯಿದಲ್ಲಿ ಬಿ.ಎಸ್.ಎನ್.ಎಲ್ ಮೂಲಕ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗಡಿಬಾಗದಲ್ಲಿ ಅನಧಿಕೃವಾಗಿ ಅಕ್ಕಿಯ ಮಾರಾಟ ಮತ್ತು ಸಾಗಾಟದ ಬಗ್ಗೆ ನಿಗಾ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಪಡಿತರ ಚೀಟಿಯ ಕೆವೈಸಿ ಯಲ್ಲಿ ಶೇ.97 ರಷ್ಟು ಪ್ರಗತಿಯಾಗಿದ್ದು, ಮಾರ್ಚ್ ತಿಂಗಳ ಕೊನೆಯವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಕಾರ್ಯ ಜರುಗಲಿದ್ದು, ಇದಕ್ಕಾಗಿ ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮ್ಮ ಬಯೋ ಮೆಟ್ರಿಕ್ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು. ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದರು.
ಸಭೆಯಲ್ಲಿ ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣ್‌ಕರ್, ಆಹಾರ ನಿರೀಕ್ಷಕರುಗಳು ಉಪಸ್ಥಿತರಿದ್ದರು.