ಕಾರವಾರ: ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ 125 ಸರಕಾರಿ, 150 ಅನುದಾನಿತ, 92 ಅನುದಾನ ರಹಿತ, 25 ವಸತಿ ಶಾಲೆಗಳ ಒಟ್ಟು 20035 ವಿದ್ಯಾರ್ಥಿಗಳು ಪರೀಕ್ಷೆಗಳು ಹಾಜರಾಗಲಿದ್ದು, ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ ಎಂದರು.
CCTV ಕಣ್ಗಾವಲು..!
ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಿದ್ದು, ರಾಜ್ಯ ಮತ್ತು ಜಿಲ್ಲಾ ಹಂತಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು. ಎಲ್ಲಾ ಸಿಸಿಟಿವಿಗಳ ವೆಬ್ ಕಾಸ್ಟಿಂಗ್‌ನ್ನು ಡ್ರೈರನ್ ಮಾಡಲಾಗಿದ್ದು, ಜಿಲ್ಲಾ ಪಂಚಾಯತ್ ನಲ್ಲಿ ಇದಕ್ಕಾಗಿ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಪ್ರಶ್ನೆಪತ್ರಿಕೆಗಳನ್ನು ಸ್ವೀಕರಿಸಿದ್ದು, ತಾಲೂಕು ಖಜಾನೆಗಳಲ್ಲಿ ಪೊಲೀಸ್ ಭದ್ರತೆಯಲ್ಲಿ ಸುಭದ್ರವಾಗಿ ಇಡಲಾಗಿದೆ ಎಂದರು.
ಅಕ್ರಮ ತಡೆಗೆ ಪೊಲೀಸ್ ಸಿಬ್ಬಂದಿ ನೇಮಕ..
ಈಗಾಗಲೇ ನಡೆದಿರುವ ಪೂರ್ವಭಾವಿ ಪರೀಕ್ಷೆಯಲ್ಲಿ ಶೇ.35 ಕ್ಕಿಂತ ಕಡಿಮೆ ಅಂಕ ಪಡೆದಿದ್ದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಿ, ಹೆಚ್ಚು ಅಂಕಗಳನ್ನು ಪಡೆಯುವ ಕುರಿತಂತೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಪರೀಕ್ಷೆಯಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಮತ್ತು ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಸಾಗಾಟಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲು ಸೂಚಿಸಲಾಗಿದೆ ಎಂದರು.
ಕಟ್ಟೆಚ್ಚರ..!
ವೀಕ್ಷಕರು, ವಿಚಕ್ಷಕ ದಳ, ಮಾರ್ಗಾಧಿಕಾರಿಗಳು ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸ್ಥಾನಿಕ ಜಾಗೃತದಳ, ಕೊಠಡಿ ಮೇಲ್ವಿಚಾರಕರು ಮೊಬೈಲ್ ಸ್ವಾಧೀನಾಧಿಕಾರಿಗಳು ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ವೀಕ್ಷಕರುಗಳನ್ನು ನೇಮಕ ಮಾಡಿದ್ದು ಅವರಿಗೆ ಅಗತ್ಯ ತರಬೇತಿ ನೀಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯ ಎಲ್ಲ ಝರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಸೆಂಟರ್‌ಗಳು ಮುಚ್ಚುವ ಬಗ್ಗೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು.
ಪ್ರಶ್ನೆ ಪ್ರತಿಕೆ ಸೋರಿಕೆ ಬಗ್ಗೆ ಸುಳ್ಳು ವದಂತಿ ಹಬ್ಬಿಸುವವರ, ವ್ಯಾಟ್ಸಾಪ್‌ಗಳಲ್ಲಿ ನಕಲು ಪ್ರಶ್ನೆ ಪ್ರತಿಕೆಗಳನ್ನು ಪ್ರಕಟಿಸುವುದು ಹಾಗೂ ಇನ್ನಿತರ ಕುಚೋದ್ಯ ಚಟುವಟಿಕೆಗಳಿಗೆ ಅವಕಾಶವಾಗದಂತೆ ನಿಗಾವಹಿಸಿ ಕಾನೂನು ರೀತ್ಯಾ ಕ್ರಮವಹಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸೋಷಿಯಲ್ ಮೀಡಿಯಾ ಘಟಕ ನಿರಂತರವಾಗಿ ಪರಿಶೀಲಿಸುತ್ತಿದೆ ಎಂದರು.
ಆರೋಗ್ಯ ತಪಾಸಣಾ ಕೌಂಟರ್..!
ಪ್ರತಿ ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿ ತೆರೆಯಲಾಗಿರುವ “ಆರೋಗ್ಯ ತಪಾಸಣಾ ಕೌಂಟರ್” ಗೆ ಇಬ್ಬರು ಅರೆ ವೈದ್ಯಕೀಯ/ಆಶಾ ಕಾರ್ಯಕರ್ತೆಯರು/ಇತರೆ ಸಿಬ್ಬಂದಿಯನ್ನು ನಿಯೋಜಿಸಿದ್ದು, . ಸದರಿ ಸಿಬ್ಬಂದಿಯು ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ಹಾಜರಿದ್ದು ತಪಾಸಣಾ ಕಾರ್ಯ ನಿರ್ವಹಿಸುವಂತೆ ಆರೋಗ್ಯ ಇಲಾಖೆಗೆ ಸೂಕ್ತ ನಿರ್ದೇಶನ ನೀಡಲಾಗಿದೆ.. ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಸಾಕಷ್ಟು ಓ.ಆರ್.ಎಸ್ ಪಾಕೆಟ್ ಗಳನ್ನು ಪೂರೈಸಲಾಗಿದೆ ಎಂದರು.
ಬಸ್ ವ್ಯವಸ್ಥೆ..!
ಪರೀಕ್ಷಾ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಹಾಗೂ ಪರೀಕ್ಷಾ ದಿನಾಂಕಗಳಂದು ಮತ್ತು ಪರೀಕ್ಷಾ ದಿನಾಂಕಗಳ ಹಿಂದಿನ ದಿನಗಳಲ್ಲಿಯೂ ಸಹ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮವಹಿಸಲು ಹೆಸ್ಕಾಂ ಗೆ ಸೂಚಿಸಿದ್ದು, ಕೆ.ಎಸ್.ಆರ್.ಟಿ.ಸಿ ವತಿಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ಹಾಗೂ ಪರೀಕ್ಷೆ ಬರೆದ ನಂತರ ಮನೆಗೆ ತೆರಳಲು ಅನುಕೂಲವಾಗುವಂತೆ ಸರ್ಕಾರಿ ಬಸ್‌ಗಳನ್ನು ನಿಗದಿತ ಸಮಯಕ್ಕೆ ಬಿಡುವಂತೆ ಮತ್ತು ಅಗತ್ಯವಿರುವ ಕಡೆಗಳಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಮಾತನಾಡಿ, ಜಿಲ್ಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷಾ ಒತ್ತಡವನ್ನು ಸಮರ್ಥವಾಗಿ ಎದುರಿಸಿ ಪರೀಕ್ಷೆ ಬರೆಯುವ ಕುರಿತಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಖುದ್ದು ಶಾಲೆಗೆ ಭೇಟಿ ನೀಡಿ, ಅವರಿಗೆ ಆತ್ಮವಿಶ್ವಾಸ ಮೂಡಿಸಿ, ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆಯವಂತೆ ಪ್ರೇರೇಪಿಸಲಾಗಿದೆ ಎಂದರು.
ಜಿಲ್ಲೆಯ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದು ಉನ್ನತ ಅಂಕಗಳೊಂದಿಗೆ ಉತ್ತೀರ್ಣರಾಗುವಂತೆ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಆಲ್ ದ ಬೆಸ್ಟ್ ತಿಳಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಡಿಡಿಪಿಐ ಲತಾ ನಾಯಕ್ ಉಪಸ್ಥಿತರಿದ್ದರು.