Rain News: ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ.
ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಮಾತ್ರವಲ್ಲ, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಚುರುಕಾಗಲಿದೆ ಎಂದು ಹೇಳಿದೆ.
ಜೂನ್ 8 ರಿಂದ ಮುಂಗಾರು ಮಳೆ ಚುರುಕುಗೊಳ್ಳಲಿದೆ, ಜೂನ್ 10 ರಿಂದ ಮತ್ತೆ ಮಳೆ ಹೆಚ್ಚಾಗಲಿದೆ. ಜೂನ್ 10 ರಿಂದ 12 ರವರೆಗೆ ತುಸು ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ ಜೂನ್ 11ರಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಗದಗ, ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಜೂನ್ 12ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ಕೊಪ್ಪಳ, ರಾಯಚೂರು ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆ ನೀಡಲಾಗಿದೆ. 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.