Minority Scheme : ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಬೆನ್ನಲ್ಲೇ ಈಗ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಇದ್ದ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.
ಗುರುವಾರ (ಜೂನ್ ೧೯) ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಸತಿ ಇಲಾಖೆ ಸಚಿವರಾಗಿರುವ ಜಮೀರ್ ಅಹ್ಮದ್ ಖಾನ್ ಈ ಕುರಿತಾದ ಪ್ರಸ್ತಾಪವನ್ನು ಸಂಪುಟ ಸಭೆಯಲ್ಲಿ ಇಟ್ಟಿದ್ದರು. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಲ್ಲಿ ಮೀಸಲಾತಿ ಸೌಲಭ್ಯ ಸಿಗಲಿದೆ.
ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ ಅವರು, “ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯು ಜಾರಿಗೆ ತರುತ್ತಿರುವ ವಿವಿಧ ವಸತಿ ಯೋಜನೆಯಲ್ಲಿ, ಅಲ್ಪಸಂಖ್ಯಾತರ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ಅಲ್ಪಸಂಖ್ಯಾತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ರಹಿತರಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆಈ ಬಗ್ಗೆ ಅಧ್ಯಯನ ವರದಿ ಇದೆ. ಇದನ್ನೆಲ್ಲಾ ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ‘ಎಸ್ಸಿ, ಎಸ್ಟಿ ಹಾಗೂ ಸಾಮಾನ್ಯ ಕೆಟಗರಿಯಲ್ಲಿ ಮೀಸಲಾತಿ ಇರಲಿದೆ ಎಂದು ಮಾಹಿತಿ ನೀಡಿದರು.
ಇದು ಎಲ್ಲ ಅಲ್ಪಸಂಖ್ಯಾತರಿಗೂ ಅನ್ವಯವಾಗುತ್ತದೆ. ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವು ಉತ್ತರ ಕೊಡುವುದಿಲ್ಲ. ವಸತಿ ಇಲ್ಲದವರಿಗೆ ಹೆಚ್ಚಿನ ಸೌಲಭ್ಯಗಳನ್ನು ಕೊಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.