ಮುಂಡಗೋಡ: ತಾಲೂಕಿನ ಅನುದಾನಿತ ಕ್ರೈಸ್ತ ಶಿಕ್ಷಣ ಸಂಸ್ಥೆಯಾದ ಲೊಯೋಲಾ ಶಿಕ್ಷಣ ಸಂಸ್ಥೆಯಲ್ಲಿ ಸರ್ಕಾರ ನಿಗದಿಪಡಿಸಿರುವ ದಸರಾ ರಜೆಯನ್ನು ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿರುವ ಹಿಂದೂ ಪರ ಸಂಘಟನೆಗಳು, ಸರ್ಕಾರದ ರಜೆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಗ್ರಹಿಸಿ ತಹಶೀಲ್ದಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.

ಮನವಿಯಲ್ಲಿ, ಸರ್ಕಾರ ನಿಗದಿಪಡಿಸಿರುವ ದಸರಾ ರಜೆಯ ದಿನಗಳನ್ನು ಕಡಿತಗೊಳಿಸಿ ಆ ದಿನಗಳಲ್ಲಿ ಶಿಕ್ಷಕರಿಗೆ ಹಾಜರಿ ನೀಡುವಂತೆ ಮಾಡಲಾಗುತ್ತಿದೆ ಅಂತ ಸಂಘಟನೆಗಳು ಆರೋಪಿಸಿವೆ. ದಸರಾ ನಮ್ಮ ನಾಡಿನ ಪ್ರಮುಖ ಹಬ್ಬವಾಗಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಹಿನ್ನೆಲೆಯ ಜನರು ಹಬ್ಬವನ್ನು ಆಚರಿಸುತ್ತಾರೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೂ ಹಬ್ಬದ ಸಂದರ್ಭದಲ್ಲಿ ರಜೆ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳಲ್ಲಿ ಗೊಂದಲ..!
ಲಯೋಲಾ ಶಿಕ್ಷಣ ಸಂಸ್ಥೆಯಲ್ಲಿ ದಸರಾ ರಜೆಯ ವಿಷಯದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಉಂಟಾಗಿದೆ. ಸರ್ಕಾರ ನಿಗದಿಪಡಿಸಿರುವ ರಜಾ ದಿನಗಳನ್ನು ಕಡಿತಗೊಳಿಸದಂತೆ ಹಾಗೂ ಶಿಕ್ಷಣ ಇಲಾಖೆಯ ನಿಯಮಗಳನ್ನು ಪಾಲಿಸುವಂತೆ ಸಂಸ್ಥೆಗೆ ಸೂಚನೆ ನೀಡಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.
ಅಲ್ಲದೆ, ಸರ್ಕಾರದ ಶೈಕ್ಷಣಿಕ ಸಂಸ್ಥೆಗಳಿಗೆ ನಿಗದಿಪಡಿಸಿರುವ ರಜಾ ವೇಳಾಪಟ್ಟಿಯನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸದೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರದ ನಿಯಮಗಳು ಮತ್ತು ಶೈಕ್ಷಣಿಕ ವೇಳಾಪಟ್ಟಿಯನ್ನು ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಹಿಂದು ಸಂಘಟನೆ ಎಚ್ಚರಿಕೆ..!
ಒಂದು ವೇಳೆ ಮನವಿಯನ್ನು ಪರಿಗಣಿಸದೆ, ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿ ರಜಾ ದಿನಗಳನ್ನು ಕಡಿತಗೊಳಿಸುವ ಕ್ರಮ ಮುಂದುವರಿದರೆ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಮುಂದಿನ ಹಂತದ ಕ್ರಮ ಕೈಗೊಳ್ಳುವುದಾಗಿ ಹಿಂದೂ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲನೆ ನಡೆಸಿ, ಸರ್ಕಾರದ ರಜೆ ಆದೇಶದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳು ಮನವಿ ಮಾಡಿವೆ.
