ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 7 ರಿಂದ ಮುಂದಿನ ಎರಡು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ (IMD) ‘ರೆಡ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಐದು ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಜುಲೈ 7, 2026ರ ಮಂಗಳವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಯಾವ ತಾಲೂಕುಗಳಿಗೆ ರಜೆ..?
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಬಲವಾದ ಗಾಳಿ ಬೀಸುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲೂಕುಗಳ ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 7ರಂದು ರಜೆ ಇರಲಿದೆ.
ಮಕ್ಕಳ ಸುರಕ್ಷತೆಗೆ ಆದ್ಯತೆ..!
ಧಾರಾಕಾರ ಮಳೆಯಿಂದಾಗಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅಡಚಣೆ ಅಥವಾ ಅನಾಹುತಗಳು ಸಂಭವಿಸಬಾರದು ಎಂಬ ಮುನ್ನೆಚ್ಚರಿಕೆಯಿಂದ, ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ಆದೇಶ ನೀಡಿದ್ದಾರೆ.
ಅಲ್ಲದೆ, ರಜೆ ಘೋಷಿಸಲಾಗಿರುವ ದಿನದ ಶೈಕ್ಷಣಿಕ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಸದ್ಯಕ್ಕೆ ಎಂದಿನಂತೆ ಶಾಲೆಗಳು ಕಾರ್ಯನಿರ್ವಹಿಸಲಿವೆ.
