ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತವಾಗಿದೆ. ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ನಡೆದ ಈ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಲಾರಿಗೆ ಡಿಕ್ಕಿ ಹೊಡೆದ ಕ್ರೂಸರ್..!
ಧಾರವಾಡ ಮೂಲದ ಒಂಬತ್ತು ಮಂದಿ ಕ್ರೂಸರ್ ವಾಹನದಲ್ಲಿ ಅಂಕೋಲಾ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ಬಳಿ ಎದುರಿನಿಂದ ಬಂದ ಲಾರಿಯೊಂದಿಗೆ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಆರು ಜನ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಆಸ್ಪತ್ರೆಗೆ ದಾಖಲು..!
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಮೂವರನ್ನು ತಕ್ಷಣವೇ ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಸದ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪೊಲೀಸರ ಭೇಟಿ..!
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಗುರುತು ಇನ್ನು ಪತ್ತೆಯಾಗಬೇಕಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
