ಬೆಳಗಾವಿಯಲ್ಲಿ ಇಂದು ರೈತರ ‘ಜೈಲ್ ಭರೋ ಪಾದಯಾತ್ರೆ’ ಹಿನ್ನೆಲೆ, ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಜಿಲ್ಲಾಡಳಿತ ನಿಷೇಧ..!

ಬೆಳಗಾವಿ: ಜಿಲ್ಲೆಯಲ್ಲಿ ರೈತ ಸಂಘಟನೆಗಳು ಹಮ್ಮಿಕೊಂಡಿರುವ ‘ಜೈಲ್ ಭರೋ ಪಾದಯಾತ್ರೆ’ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಕಠಿಣ ಆದೇಶ ಹೊರಡಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNS) 2023ರ ಕಲಂ 163ರ ಅಡಿಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಯಾವುದೇ ಕಾರಣಕ್ಕೂ ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳನ್ನು ಬಂದ್ ಮಾಡುವಂತಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಡಿಸಿ ವಿಧಿಸಿರುವ ಮುಖ್ಯ ಷರತ್ತುಗಳು..!
ಹೆದ್ದಾರಿ ಪ್ರತಿಭಟನೆಗೆ ತಡೆ:                              ಬೆಳಗಾವಿ ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ಸೇರಿದಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಗುಂಪುಗಳು ಪ್ರತಿಭಟನೆ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಟೋಲ್ ಪ್ಲಾಜಾಗಳು ಬಂದ್ ಮಾಡುವಂತಿಲ್ಲ:       ಜಿಲ್ಲೆಯ ವ್ಯಾಪ್ತಿಯಲ್ಲಿರುವ ಮೂರು ಟೋಲ್ ಪ್ಲಾಜಾಗಳ ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿಪಡಿಸುವಂತಿಲ್ಲ.

ಸಂಚಾರ ತಡೆಗೆ ನಿಷೇಧ:                              ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಟ್ರ್ಯಾಕ್ಟರ್ ಸೇರಿದಂತೆ ಯಾವುದೇ ವಾಹನಗಳನ್ನು ಅಡ್ಡಗಟ್ಟಿ ಸಂಚಾರಕ್ಕೆ ಅಡಚಣೆ ಉಂಟುಮಾಡುವಂತಿಲ್ಲ.

ಸಾರ್ವಜನಿಕ ಆಸ್ತಿ ರಕ್ಷಣೆ:                            ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಪಾಸ್ತಿಗೆ ಯಾವುದೇ ರೀತಿಯ ಹಾನಿ ಮಾಡಬಾರದು.

ಕಠಿಣ ಪೊಲೀಸ್ ಭದ್ರತೆ‌..!                          ಸಾರ್ವಜನಿಕರ ರಕ್ಷಣೆಗಾಗಿ ಅಗತ್ಯ ಭದ್ರತೆ ಒದಗಿಸುವಂತೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹಾಗೂ ಪೊಲೀಸ್ ಕಮಿಷನರ್‌ಗೆ ನಿರ್ದೇಶನ ನೀಡಲಾಗಿದೆ.

ಉಲ್ಲಂಘಿಸಿದರೆ ಕಠಿಣ ಕ್ರಮ..!                    ಜಿಲ್ಲಾಡಳಿತದ ನಿಷೇಧಾಜ್ಞೆ ಹಾಗೂ ಷರತ್ತುಗಳನ್ನು ಉಲ್ಲಂಘಿಸುವವರ ವಿರುದ್ಧ ಪೊಲೀಸರು ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕ ಸಾರಿಗೆಗೆ ತೊಂದರೆಯಾಗದಂತೆ ತಡೆಯಲು ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.