ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರವು ಜುಲೈ 6, 2026 ರಂದು ನೀಡಿರುವ ಮುನ್ಸೂಚನೆಯಂತೆ, ಕರ್ನಾಟಕದಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದೆ. ಮುಂಬರುವ ಎರಡು ದಿನಗಳವರೆಗೆ ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಪ್ರಮುಖ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ರೆಡ್ ಅಲರ್ಟ್ ಎಲ್ಲೇಲ್ಲಿ..?
ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಯಾದ ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ 204.5 ಮಿ.ಮೀ ಗಿಂತಲೂ ಹೆಚ್ಚಿನ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಆರೆಂಜ್ ಅಲರ್ಟ್ ಎಲ್ಲೇಲ್ಲಿ..?
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ವಿಜಯಪುರ ಮುಂತಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ (Orange Alert) ಮುನ್ಸೂಚನೆ ನೀಡಲಾಗಿದೆ.
ಗುಡುಗು ಸಹಿತ ಗಾಳಿ..!
ಕರಾವಳಿ ಹಾಗೂ ಒಳನಾಡಿನ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಗುಡುಗು ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ..!
ಕಡಲಿನಲ್ಲಿ ಬಲವಾದ ಗಾಳಿ ಹಾಗೂ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.
