ಕಾರವಾರ; ಪ್ರಸಕ್ತ ಬೇಸಿಗೆಯಲ್ಲಿ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ, ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಸೂಚನೆ ನೀಡಿದರು.

ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆಯಲ್ಲಿ 41 ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, 17 ಗ್ರಾಮಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿನ ಸರಬರಾಜು ಮಾಡಲು 98 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದ್ದು, ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಸಮಸ್ಯೆ ಕಂಡುಬಂದಲ್ಲಿ ತ್ವರಿತವಾಗಿ ಸ್ಪಂದಿಸಿ, ನೀರು ಒದಗಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳ ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ ಪೈಪ್ ಲೈನ್ ಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಹಾಗೂ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಪ್ರಾಥಮಿಕ ಹಂತದಲ್ಲಿ ನಿರಂತರವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವ ಮೂಲಕ ಯಾವುದೇ ಸಂದರ್ಭದಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನ ನೀಡಿದರು.
ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ವೇರಿಯೇಷನ್ ಮತ್ತು ಅವಧಿ ವಿಸ್ತರಣೆ ಪ್ರಸ್ತಾವನೆಯ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದ ಅವರು, ಅರಣ್ಯ ಇಲಾಖೆಯ ಅನುಮತಿಗೆ ಸಲ್ಲಿಸಿರುವ ಕಾಮಗಾರಿಗಳ ಕುರಿತಂತೆ ಆಕ್ಷೆಪಣೆಗಳನ್ನು ಬಗೆಹರಿಸಲು ನಿರಂತರವಾಗಿ ಫಾಲೋ ಅಪ್ ಮಾಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಮತ್ತು ಬೋರ್‌ವೆಲ್ ಗಳನ್ನು ಕೊರೆಯುವ ಸಂದರ್ಭದಲ್ಲಿ ಭೂ ವಿಜ್ಞಾನಿಗಳಿಂದ ಪರಿಶೀಲನೆ ನಡೆಸಿ, ಅವರ ಅನುಮತಿಯ ನಂತರ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು.
ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಲ್ಲಿ ಇದುವರೆಗೆ 745 ಕಾಮಗಾರಿಗಳನ್ನು ಪೂರ್ಣಗೊಳಿಸಿ, 685 ಕಾಮಗಾರಿಗಳನ್ನು ಗ್ರಾಮ ಪಂಚಾಯತ್ ಗಳಿಗೆ ಹಸ್ತಾಂತರಿಸಿ ಶೇ.77.85 ಪ್ರಗತಿ ಸಾಧಿಸಿ, ರೂ.481.25 ಕೋಟಿ ವೆಚ್ಚ ಮಾಡಿ, ಶೇ.54.76 ಆರ್ಥಿಕ ಪ್ರಗತಿ ಸಾಧಿಸಿದ್ದು, ಪ್ರಸ್ತುತ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾ ಭಕಷ್, ಮುಖ್ಯ ಲೆಕ್ಕಾಧಿಕಾರಿ ಆನಂದ್ ಸಾ ಹಬೀಬ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯಪ್ಪ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
